ಕರಡಿಕೊಪ್ಪಲು ಗ್ರಾಮದಲ್ಲಿ ಸಿಹಿ ವಿತರಣೆ, ಭೋಜನ ಕೂಟ ಆಯೋಜನೆ
ಪಾಲನೆ ನ್ಯೂಸ್
ಮಂಡ್ಯ: ರಾಜ್ಯದಲ್ಲಿ ಸುದೀರ್ಘ ಅವಧಿಗೆ ಅಡಳಿತ ನಡೆಸಿದ ಮುಖ್ಯಮಂತ್ರಿ ಎಂಬ ದಿವಂಗತ ದೇವರಾಜು ಅರಸು ಅವರ ದಾಖಲೆಯನ್ನು ಸಿಎಂ ಸಿದ್ದರಾಮಯ್ಯ ಅವರು ಜನವರಿ 6 ರಂದು ಸರಿಗಟ್ಟಿ ಹೊಸ ದಾಖಲೆ ಬರೆಯಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅಭಿಮಾನಿಗಳು ಜನವರಿ 7 ರ ಬುಧವಾರ ಸಂಜೆ 6 ಗಂಟೆಗೆ ತಾಲೂಕಿನ ಕರಡಿಕೊಪ್ಪಲು ಗ್ರಾಮದಲ್ಲಿ ವಿಶೇಷ ದಿನವನ್ನಾಗಿ ಆಚರಿಸಿ ಗ್ರಾಮಸ್ಥರಿಗೆ ಸಿಹಿ ಹಂಚಿ ಭೋಜನ ಕೂಟ ಏರ್ಪಡಿಸಲಾಗಿದೆ ಎಂದು ಕೆಪಿಸಿಸಿ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ಸಿದ್ದರಾಮಯ್ಯ ಅಭಿಮಾನಿ ಕೆ.ಸಿ.ಪುಟ್ಟಸ್ವಾಮಿಗೌಡ ತಿಳಿಸಿದ್ದಾರೆ .
ಸೋಮವಾರ ಪ್ರೆಸ್ ಕ್ಲಬ್ ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯವನ್ನು ತಿಳಿಸಿದರು.
ಹಿಂದುಳಿದ ವರ್ಗಗಳ ಸಾಮಾಜಿಕ ನ್ಯಾಯದ ಹರಿಕಾರ ಡಿ.ದೇವರಾಜ ಅರಸು ಅವರು ಸುದೀರ್ಘ ಅವಧಿಗೆ ಮುಖ್ಯಮಂತ್ರಿಯಾದ ದಾಖಲೆಯನ್ನು ಸಿದ್ದರಾಮಯ್ಯ ಅವರು ಮುರಿಯಲಿದ್ದಾರೆ. ಈ ಸಂಭ್ರಮದಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ರವಿಕುಮಾರ ಗಣಿಗ, ಡಾ.ರಾಮಮನೋಹರ ಲೋಹಿಯಾ ವಿಚಾರ ವೇದಿಕೆ ಅಧ್ಯಕ್ಷ ದಡದಪುರ ಶಿವಣ್ಣ, ಮೈಸೂರು-ಚಾಮರಾಜನಗರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ದೊಡ್ಡಸ್ವಾಮಿಗೌಡ, ಮಂಡ್ಯ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಚ್ಚಿನ್ ಚಲುವರಾಯಸ್ವಾಮಿ, ರಾಜ್ಯ ಕೈಮಗೆ ಅಭಿವೃದ್ಧಿ ನಿಗಮ ಅಧ್ಯಕ್ಷ ಬಿ.ನಾಗೇಂದ್ರ ಕುಮಾರ್, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಎಂ.ಎಲ್.ಸುರೇಶ್, ಮಂಡ್ಯ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಎಂ.ಎಸ್.ಚಿದಂಬರ್, ಮನ್ ಮುಲ್ ಅಧ್ಯಕ್ಷ ಉಮ್ಮಡಹಳ್ಳಿ ಶಿವಪ್ಪ, ಮೈಸೂರು ಮಹಾನಗರ ಪಾಲಿಕೆ ಸದಸ್ಯ ಜಿ.ಗೋಪಿ, ಹೊಳೆನರಸೀಪುರ ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಮಂಜೇಗೌಡ, ಚಲನಚಿತ್ರ ನಿರ್ಮಾಪಕ ಮಾವಿನಕೆರೆ ಸುರೇಶ್ ಸೇರಿದಂತೆ ಮತ್ತಿತರ ಕಾಂಗ್ರೆಸ್ ಮುಖಂಡರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಅವರು ಮನವಿ ಮಾಡಿದ್ದಾರೆ.
