ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ಪ್ರತಿಬಂಧ) ಅಧಿನಿಯಮ ಅರಿವು ಮೂಡಿಸಿ: ಡಾ.ಕುಮಾರ
ಪಾಲನೆ ನ್ಯೂಸ್

ಮಂಡ್ಯ: ಪ್ರಸ್ತುತ ಮಂಡ್ಯ ಜಿಲ್ಲೆಯ ವರ್ಷಕ್ಕೆ ಸರಾಸರಿ 65-70 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ಪ್ರತಿಬಂಧ) ಅಧಿನಿಯಮ ಕಾಯ್ದೆಯಡಿ ಪ್ರಕರಣಗಳು ದಾಖಲಾಗುತ್ತಿವೆ. ಆಧುನಿಕ ಸಮಾಜದಲ್ಲೂ ಅಸ್ಪೃಶ್ಯತೆ ಆಚರಣೆ ನಡೆಯುತ್ತಿರುವುದು ಒಂದು ಸಾಮಾಜಿಕ ಪಿಡುಗು ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಹೇಳಿದರು.
ಇಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ಪ್ರತಿಬಂಧ) ಅಧಿನಿಯಮ 1989 (ತಿದ್ದುಪಡಿ) ಅಧಿನಿಯಮ 2015 ಮತ್ತು ನಿಯಮಗಳ 1995 (ತಿದ್ದುಪಡಿ) ನಿಯಮಗಳು 2016 ಮತ್ತು ನಾಗರೀಕ ಹಕ್ಕು ರಕ್ಷಣಾ ಕಾಯ್ದೆ 1955 ರಂತೆ ಸರ್ಕಾರೇತರ ಸಂಘ/ಸಂಸ್ಥೆಗಳ ಸಮನ್ವಯದೊಂದಿಗೆ ಜಾಗೃತಿ/ಅರಿವು ಮೂಡಿಸಲು ವಿಚಾರಗೋಷ್ಠಿ/ಕಾರ್ಯಾಗಾರ ಮತ್ತು ಇತರೆ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸುವ ಸಂಬಂಧ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ಪ್ರತಿಬಂಧ) ಅಧಿನಿಯಮ ಕಾಯ್ದೆಯ ತೀವ್ರತೆ ತಿಳಿಯದೆ, ಅರಿವಿನ ಕೊರತೆಯಿಂದ ಪರಿಶಿಷ್ಟರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ಜಿಲ್ಲೆಯ ಎಲ್ಲಾ ನೋಂದಾಯಿತ ಪ್ರಗತಿಪರ ಸಂಘ ಸಂಸ್ಥೆಗಳನ್ನು ಒಳಗೊಂಡಂತೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ ಪ್ರತಿಬಂಧ) ಕಾಯ್ದೆಯ ಕುರಿತಾಗಿ ಅರಿವಿನ ಕಾರ್ಯಾಗಾರವನ್ನು ಹಮ್ಮಿಕೊಳ್ಳಬೇಕು ಎಂದು ಹೇಳಿದರು.
ದೌರ್ಜನ್ಯ ಪ್ರಕರಣಗಳನ್ನು ಕೇವಲ ಕಾನೂನಿನಿಂದ ಮಾತ್ರ ತಡೆಯಲು ಸಾಧ್ಯವಿಲ್ಲ. ಎಲ್ಲರಲ್ಲೂ ಸಮಾನತೆ ಮನೋಭಾವನೆ ಮತ್ತು ಮನುಷ್ಯತ್ವ ಇದ್ದಾಗ ಮಾತ್ರ ಇಂತಹ ಅನಿಷ್ಠ ಪದ್ಧತಿಗಳನ್ನು ಸಮಾಜದಿಂದ ಸಂಪೂರ್ಣವಾಗಿ ತೆಗೆದು ಹಾಕಲು ಸಾಧ್ಯ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಅರಿವು ಮೂಡಿಸುವ ಕಾರ್ಯಾಗಾರ ಮತ್ತು ವಿಚಾರಗೋಷ್ಠಿಯನ್ನು ಜಿಲ್ಲೆಯ ಎಲ್ಲಾ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಉಪಸ್ಥಿತಿಯಲ್ಲಿ ಫೆಬ್ರವರಿ ಅಂತ್ಯ ಅಥವಾ ಮಾರ್ಚ್ ಆರಂಭದಲ್ಲಿ ನಡೆಸೋಣ ಎಂದು ಹೇಳಿದರು.

ಸಂಪನ್ಮೂಲ ವ್ಯಕ್ತಿಗಳನ್ನು ಕಾರ್ಯಕ್ರಮಕ್ಕೆ ಕರೆದು ಜಿಲ್ಲೆಯ ಎಲ್ಲಾ ಸಂಘ ಸಂಸ್ಥೆಗಳ ಮುಖಂಡರಿಗೂ ಇದರ ಕುರಿತಾಗಿ ಅರಿವು ಮೂಡಿಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರಕರಣಗಳಲ್ಲಿ ಸಾಕ್ಷಿ ಹೇಳುವ ಸಾಕ್ಷಿದಾರರಿಗೆ ಧೈರ್ಯ ತುಂಬುವ ಕೆಲಸವಾಗಬೇಕು. ಸಾಕ್ಷಿದಾರರಿಗೆ ಸದರಿ ದಿನದ ಕೂಲಿ ಮೊತ್ತವನ್ನು ಟಿ.ಎ., ಡಿ.ಎ. ರೂಪದಲ್ಲಿ ನೀಡಲಾಗುತ್ತದೆ. ಅದರ ಕುರಿತಾಗಿಯೂ ಅರಿವು ಮೂಡಿಸಬೇಕು ಎಂದು ಹೇಳಿದರು.
ಜಿಲ್ಲಾ ಪೊಲೀಸ್ ಅಧೀಕ್ಷಕಿ ಶೋಭಾರಾಣಿ ವಿ.ಜೆ. ಅವರು ಮಾತನಾಡಿ ಶಿಕ್ಷಣದಿಂದ ಮಾತ್ರ ಸಮಾಜದ ಎಲ್ಲಾ ಅನಿಷ್ಟ ಪದ್ಧತಿಗಳನ್ನು ಹೋಗಲಾಡಿಸಲು ಸಾಧ್ಯ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ದೌರ್ಜನ್ಯ ತಡೆ ಕಾಯ್ದೆಯ ಕುರಿತಾಗಿ ಮೊದಲು ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ಮೂಡಿಸಬೇಕು. ಪೊಲೀಸ್ ಠಾಣೆಗಳಲ್ಲಿ ಹೇಗೆ ದೌರ್ಜನ್ಯ ಪ್ರಕರಣಗಳನ್ನು ದಾಖಲಿಸುವುದು ಎಂಬುದರ ಕುರಿತಾಗಿ ಒಂದು ವಿಶೇಷ ಕಾರ್ಯಾಗಾರವನ್ನು ಆಯೋಜಿಸಬೇಕು ಎಂದು ಹೇಳಿದರು.
ಪರಿಶಿಷ್ಟರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ನೀಡಲಾಗುವ ಸೌಲಭ್ಯಗಳ ಕುರಿತು ಅರಿವು ಕಾರ್ಯಕ್ರಮ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯ ಅಂಶಗಳ ಫಲಕವನ್ನು ಗ್ರಾಮ ಪಂಚಾಯಿತಿಗಳಲ್ಲಿ ಅಳವಡಿಸಿ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ದೌರ್ಜನ್ಯ ಪ್ರಕರಣಗಳನ್ನು ಡಿವೈ.ಎಸ್.ಪಿ. ಹಂತದಲ್ಲಿ ತನಿಖೆ ನಡೆಸಬೇಕು. ನಮ್ಮ ಜಿಲ್ಲೆಯಲ್ಲಿ ನಡೆಸಲಾಗುವ ಸದರಿ ಕಾರ್ಯಕ್ರಮವನ್ನು ಇತರ ಜಿಲ್ಲೆಗೆ ಮಾದರಿಯಾಗುವಂತೆ ನಡೆಸೋಣ ಎಂದು ಹೇಳಿದರು.
ಸಭೆಯಲ್ಲಿ ರಾಜ್ಯ ಸಣ್ಣ ಕೈಗಾರಿಕೆಗಳ ಉಪಾಧ್ಯಕ್ಷೆ ವಿಜಯಲಕ್ಷ್ಮಿ ರಘುನಂದನ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶ್ರೀನಿವಾಸ್ ಸೇರಿದಂತೆ ವಿವಿಧ ಸಮುದಾಯಗಳ ಮುಖಂಡರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

