ಪಾಲನೆ ನ್ಯೂಸ್
ಮಂಡ್ಯ: ಕಳೆದ ಎರಡೂವರೆ ವರ್ಷದಲ್ಲಿ ಬಿ.ಗೌಡಗೆರೆ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ರಸ್ತೆ ಸೇರಿದಂತೆ ಹಲವಾರು ಅಭಿವೃದ್ಧಿ ಕಾಮಗಾರಿಗಳಿಗೆ 15 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ರವಿಕುಮಾರ್ ಅವರು ಹೇಳಿದರು.
ಮಂಡ್ಯ ತಾಲ್ಲೂಕು ಆಡಳಿತದ ವತಿಯಿಂದ ಬಿ.ಗೌಡಗೆರೆ ಗ್ರಾಮದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ಸಾರ್ವಜನಿಕರು ಸರ್ಕಾರಿ ಕಚೇರಿಗಳನ್ನು ಅಲೆಯುವುದನ್ನು ತಪ್ಪಿಸಲು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯ ಡಿ.ಕೆ ಶಿವಕುಮಾರ್ ಅವರು ಜನ ಸ್ಪಂದನ ಕಾರ್ಯಕ್ರಮವನ್ನು ಜಾರಿ ಗೊಳಿಸಿದರು ಎಂದು ಹೇಳಿದರು.
ಇದು ಮಂಡ್ಯ ತಾಲೂಕಿನಲ್ಲಿ ನಡೆಯುತ್ತಿರುವ 15 ನೇ ಜನತಾ ದರ್ಶನ ಕಾರ್ಯಕ್ರಮವಾಗಿದೆ. ಮಂಡ್ಯ ನಗರದ ವಾರ್ಡ್ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿನಲ್ಲಿ ಅಧಿಕಾರಿಗಳನ್ನು ಒಳಗೊಂಡಂತೆ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.
ಜನಸ್ಪಂದನ ಸಭೆಯಲ್ಲಿ ಜನರು ನೀಡುವ ಅರ್ಜಿಗಳನ್ನು ಸ್ಥಳದಲ್ಲಿ ಪರಿಹರಿಸಲಾಗುವುದು. ಸಾಧ್ಯವಾಗದಿದ್ದರೆ ಅರ್ಜಿಗಳನ್ನು ಪರಿಶೀಲಿಸಿ ಕಾನೂನು ಬದ್ಧವಾಗಿದ್ದಾರೆ ಮೂವತ್ತು ದಿನಗಳಲ್ಲಿ ಸರಿಪಡಿಸಲಾಗುವುದು. ಕಣ್ಣಿನ ತಪಾಸಣೆ ಶಿಬಿರವನ್ನು ಆಯೋಜಿಸಲಾಗಿದೆ. ಅಗತ್ಯ ಇರುವವರಿಗೆ ಕನ್ನಡಕವನ್ನು ನೀಡಲಾಗುತ್ತದೆ. ಸಾರ್ವಜನಿಕರ ಸಮಸ್ಯೆ ಪರಿಹರಿಸಲು ನಮ್ಮ ಸರ್ಕಾರ ಮತ್ತು ಅಧಿಕಾರಿಗಳು ಶ್ರಮವಹಿಸುತ್ತಿದ್ದೇವೆ ಎಂದು ತಿಳಿಸಿದರು.
ಮಲ್ಲಯ್ಯನದೊಡ್ಡಿ ಮತ್ತು ಕಟ್ಟೆದೊಡ್ಡಿ ರಸ್ತೆ ಸುಮಾರು 40 ವರ್ಷಗಳಿಂದ ದುಸ್ಥಿತಿಯಲ್ಲಿತ್ತು. ಜನರ ಬೇಡಿಕೆಯಂತೆ ಸದರಿ ರಸ್ತೆ ಉದ್ಘಾಟನೆಗೆ ಸಿದ್ಧವಾಗಿದೆ. ರಸ್ತೆ ಅಭಿವೃದ್ಧಿಯನ್ನು ರೂ 2.80 ಕೋಟಿ ರೂ. ವೆಚ್ಚದಲ್ಲಿ ಎರಡು ಭಾಗವಾಗಿ ಮಾಡಲಾಗಿದೆ. ಹನಕೆರೆಯಿಂದ ಕನ್ನಲಿವರೆಗೂ ರಸ್ತೆ ನಿರ್ಮಾಣ ಮಾಡಲಾಗುವುದು. 5 ಕೋಟಿ ರೂ. ವೆಚ್ಚದಲ್ಲಿ ಹನಕೆರೆಯಿಂದ ಹುಚ್ಚಾಲ್ಗೆಯವರೆಗೂ ರಸ್ತೆಯನ್ನು ಮುಂದಿನ ದಿನಗಳಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ಹೇಳಿದರು.
ನಮ್ಮ ಸರ್ಕಾರ ಇನ್ನೂ ಎರಡೂವರೆ ವರ್ಷಗಳ ಕಾಲ ಇರುತ್ತದೆ. ಗ್ರಾಮೀಣ ಭಾಗದ ಒಳ ರಸ್ತೆಗಳನ್ನು ಹಂತ ಹಂತವಾಗಿ ಸಿದ್ಧಪಡಿಸಲಾಗುವುದು. ಕಟ್ಟೆದೊಡ್ಡಿಯಲ್ಲಿ ಸುಸರ್ಜಿತವಾದ ರಸ್ತೆಗಳನ್ನು ನಿರ್ಮಾಣ ಮಾಡಲು 20 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ. ಗ್ರಾಮ ಪಂಚಾಯಿತಿ ಕಟ್ಟಡ ನಿರ್ಮಾಣ ಮಾಡಲು 5 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.
ಜಿಲ್ಲಾಧಿಕಾರಿ ಡಾ. ಕುಮಾರ ಅವರು ಮಾತನಾಡಿ, ಜನರೊಟ್ಟಿಗೆ ಬೆರೆಯುವ ನಿಜವಾದ ಜನನಾಯಕ ರವಿಕುಮಾರ್. ಯಾವಾಗಲೂ ಜನರೊಟ್ಟಿಗೆ ಇದ್ದು ಜನರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲಿಯೇ ಜನರಿಗೆ ಪರಿಹಾರ ನೀಡಬೇಕು ಎಂಬ ದೂರದೃಷ್ಟಿ ಹೊಂದಿದ್ದಾರೆ. ಕಳೆದ 6 ತಿಂಗಳಲ್ಲಿ 10 ಕ್ಕೂ ಹೆಚ್ಚು ಜನಸ್ಪಂದನ ಕಾರ್ಯಕ್ರಮವನ್ನು ಶಾಸಕರು ಆಯೋಜಿಸಿದ್ದಾರೆ ಎಂದು ಹೇಳಿದರು.
ಅನೇಕ ಸಂದರ್ಭಗಳಲ್ಲಿ ಅನಿವಾರ್ಯ ಕಾರಣಗಳಿಂದ ಸಾರ್ವಜನಿಕರು ಅಧಿಕಾರಿಗಳನ್ನು ಭೇಟಿ ಮಾಡಲು ಸಾಧ್ಯವಾಗುವುದಿಲ್ಲ. ಇಂತಹ ಜನಸ್ಪಂದನ ಕಾರ್ಯಕ್ರಮದಲ್ಲಿ ಅಧಿಕಾರಿಗಳು ನಿಮ್ಮ ಊರಿಗೆ ಬಂದು ನಿಮ್ಮ ಸಮಸ್ಯೆಗಳನ್ನು ಆಲಿಸಿ ಕಾನೂನು ಬದ್ಧವಾಗಿ ಪರಿಹಾರ ಒದಗಿಸುತ್ತಾರೆ. ಮೃತರ ಹೆಸರು ಪಹಣಿಯಲ್ಲಿ ಈಗಲೂ ಸಹ ಮುಂದುವರೆಯುತ್ತಿದೆ. ವಾರಸುದಾರರು ತಾಲ್ಲೂಕು ಕಚೇರಿಗೆ ಆರ್.ಟಿ.ಸಿ, ವಂಶವೃಕ್ಷ ಮತ್ತು ಮರಣ ಪ್ರಮಾಣ ಪತ್ರ ನೀಡಿ ತಮ್ಮ ಹೆಸರಿಗೆ ಮಾಡಿಕೊಳ್ಳಬೇಕಾಗಿತ್ತು. ಜನರು ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಲು ಸರ್ಕಾರ ಒಂದು ಮಹತ್ವಾಕಾಂಕ್ಷಿ ಯೋಜನೆಯಾದ ಪೌತಿ ಖಾತಾ ಆಂದೋಲನವನ್ನು ಜಾರಿಗೊಳಿಸಿದೆ ಎಂದು ತಿಳಿಸಿದರು.
ಮಂಡ್ಯ ಜಿಲ್ಲೆಯ ಎಲ್ಲಾ ಕಂದಾಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ವರ್ಗ ಉತ್ತಮವಾದ ಕೆಲಸವನ್ನು ಮಾಡಿರುವುದರಿಂದ ರಾಜ್ಯದಲ್ಲಿ ಮಂಡ್ಯ ಜಿಲ್ಲೆ ಪೌತಿ ಖಾತೆ ಆಂದೋಲನದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ. ಆಫ್ ಲೈನ್ ನಲ್ಲಿ 70 ಸಾವಿರಕ್ಕೂ ಹೆಚ್ಚು ಪೌತಿ ಖಾತೆ ಮತ್ತು ಇ- ಪೌತಿ ಖಾತೆ ಮುಖಾಂತರ 58 ಸಾವಿರ ಪೌತಿ ಖಾತೆಯನ್ನು ಜಿಲ್ಲೆಯಲ್ಲಿ ಮಾಡಿದ್ದೇವೆ. ಮುಂದಿನ ದಿನಗಳಲ್ಲೂ ಹೆಚ್ಚು ಪೌತಿ ಖಾತೆಗಳನ್ನು ಮಾಡಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ತಹಸೀಲ್ದಾರ್ ವಿಶ್ವನಾಥ್, ಸರ್ಕಲ್ ಇನ್ಸ್ ಪೆಕ್ಟರ್ ಪ್ರಕಾಶ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಪಾಲನೆ.ಇನ್ ವಾಟ್ಸ್ ಆಪ್ ಗುಂಪಿಗೆ ಸೇರಿರಿ.


