ದೈನಂದಿನ ಬೇಡಿಕೆಗೆ ತಕ್ಕಂತೆ ಗೃಹ ಬಳಕೆಯ ಅನಿಲ ಸರಬರಾಜು ಮಾಡಲು ಸೂಚನೆ ಅಕ್ರಮವಾಗಿ ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಕಾನೂನು ರೀತಿಯಲ್ಲಿ ಕ್ರಮ : ಡಾ ಕುಮಾರ
ಪಾಲನೆ ನ್ಯೂಸ್
ಮಂಡ್ಯ: ಗೃಹ ಬಳಕೆಯ ಅನಿಲ ಸರಬರಾಜು ಮತ್ತು ವಿತರಣೆ ಕುರಿತಂತೆ ಸರ್ಕಾರ ನೀಡುವ ಮಾರ್ಗಸೂಚಿಗಳನ್ನು ಅನಿಲ ವಿತರಕ ಕಂಪನಿಯ ಮಾರಾಟಗಾರರು ಪಾಲಿಸುವಂತೆ ಹಾಗೂ ಎಲ್ಲಾ ಕಂಪನಿಗಳು ಜಿಲ್ಲೆಯ ದೈನಂದಿನ ಬೇಡಿಕೆಗೆ ತಕ್ಕಂತೆ ಗೃಹ ಬಳಕೆಯ ಅನಿಲ ಸರಬರಾಜು ಮಾಡಲು ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ತಿಳಿಸಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ HPC, BPC ಮತ್ತು IOC ಅನಿಲ ವಿತರಕ ಕಂಪನಿಯ ಮಾರಾಟಾಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.
ಜಿಲ್ಲೆಯಲ್ಲಿ 34 ಅನಿಲ ವಿತರಣೆ ಕಂಪನಿಯ ಮಾರಾಟಗಾರರು ಇದ್ದು ಆಹಾರ ಇಲಾಖೆಯ ಅಧಿಕಾರಿಗಳು ನಿಯಾಮನುಸಾರ ಸ್ಧಳಕ್ಕೆ ಹೋಗಿ ಸ್ಟಾಕ್ ಪರಿಶೀಲನೆ ಮಾಡಬೇಕು. ಅಕ್ರಮ ಮಾರಾಟ ಮಾಡುವುದು. ಕಾಳಸಂತೆಯಲ್ಲಿ ಮಾರಾಟ ಮಾಡುವುದು ಕಂಡುಬಂದರೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸಾರ್ವಜನಿಕರು ಗೃಹ ಬಳಕೆ ಅನಿಲ ಮುಂಗಡ ಬುಕಿಂಗ್ ಮಾಡಿದಾಗ ಏಜೆನ್ಸಿ ಅವರು ನಿಯಾಮನುಸಾರ ಹಾಗೂ ಆದ್ಯತೆಯ ಮೇರೆಗೆ ವಿತರಣೆ ಮಾಡಬೇಕು.
ಮಂಡ್ಯ ಜಿಲ್ಲೆಯಲ್ಲಿ ಗೃಹಬಳಕೆಯ ಅನಿಲ ಸರಬರಾಜು ವ್ಯವಸ್ಥೆಯಲ್ಲಿ ಯಾವುದೇ ರೀತಿಯ ವ್ಯತ್ಯಯ ಇಲ್ಲ. ಗೃಹಬಳಕೆ ಅನಿಲದ ದೈನಂದಿನ ಸರಬರಾಜು ಮತ್ತು ವಿತರಣೆಯಲ್ಲಿ ಯಾವುದೇ ಅಡಚಣೆ ಇಲ್ಲದೇ ಎಂದಿನಂತೆ ನಡೆಯುತ್ತಿದೆ. ಸಾರ್ವಜನಿಕರು ಯಾವುದೇ ರೀತಿಯ ಅನಗತ್ಯ ಗೊಂದಲ ಮತ್ತು ಆತಂಕಗಳಿಗೆ ಒಳಗಾಗಬಾರದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಜಿಲ್ಲೆಯಲ್ಲಿನ ಅಂಗನವಾಡಿಗಳು, ಶಾಲೆಗಳು, ಆಸ್ಪತ್ರೆಗಳು, ಸರ್ಕಾರಿ ಹಾಸ್ಟೆಲ್‌ಗಳಿಗೆ ದೈನಂದಿನ ಚಟುವಟಿಕೆಗಳಿಗೆ ಯಾವುದೇ ತೊಂದರೆಯಾಗದಂತೆ ಆದ್ಯತೆಯಲ್ಲಿ ಅನಿಲ ಸರಬರಾಜು ಮಾಡುವಂತೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ವಿ. ಜೆ. ಶೋಭಾರಾಣಿ, ಆಹಾರ ಇಲಾಖೆ ಉಪನಿರ್ದೇಶಕ ಪ್ರತೀಕ ಹೆಗ್ಡೆ ಹಾಗೂ ಅನಿಲ ಸರಬರಾಜು ಕಂಪನಿಗಳ ಅಧಿಕಾರಿಗಳು ಮತ್ತು ಜಿಲ್ಲೆಯ ವಿವಿಧ ತಾಲೂಕುಗಳ ಅನಿಲ ಸರಬರಾಜುದಾರರು ಭಾಗವಹಿಸಿದ್ದರು.
✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn
