NEWS

ಕುಡಿಯುವ ನೀರು ಸರಬರಾಜಿಗೆ ಸಂಬಂಧಿಸಿದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲು ಸೂಚನೆ: ಜಿ.ಪಂ. ಸಿಇಓ ನಂದಿನಿ ಕೆ.ಆರ್.

ಪಾಲನೆ ನ್ಯೂಸ್

ಮಂಡ್ಯ: ಬೇಸಿಗೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳ ಸಾರ್ವಜನಿಕರಿಗೆ ಕುಡಿಯುವ ನೀರು ಸರಬರಾಜಿನಲ್ಲಿ ಯಾವುದೇ ತೊಂದರೆ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಜಿ.ಪಂ. ಸಿಇಓ ನಂದಿನಿ ಕೆ.ಆರ್.‌ ಅವರು ತಿಳಿಸಿದರು.

ಸೋಮವಾರ ಜಿಲ್ಲಾ ಪಂಚಾಯತ್‌ ನ ಕೆಸ್ವಾನ್‌ ಸಭಾಂಗಣದಲ್ಲಿ ನಡೆದ ವಿಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿ ಒಟ್ಟು 289 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದೆಂದು ಅಂದಾಜಿಸಲಾಗಿದ್ದು, ಈಗಾಗಲೇ 13 ಗ್ರಾಮಗಳಲ್ಲಿ ಖಾಸಗಿ ಕೊಳವೆಬಾವಿಗಳ ಮೂಲಕ ಪರ್ಯಾಯವಾಗಿ ಕುಡಿಯುವ ನೀರು ಸರಬರಾಜು ಮಾಡುವ ವ್ಯವಸ್ಥೆ ಕಲ್ಪಿಸಲಾಗಿದೆ. ಉಳಿದ ಗ್ರಾಮಗಳಲ್ಲಿಯೂ ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಕೊಳವೆಬಾವಿಗಳಲ್ಲಿ ಇಳುವರಿ ಕಡಿಮೆಯಾದ ತಕ್ಷಣವೇ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳಿಗೆ ವಿಶೇಷ ಸೂಚನೆ ನೀಡಲಾಗಿದೆ. ಅದರಂತೆ ಕೊಳವೆಬಾವಿಗಳನ್ನು ಮರು ಆಳಗೊಳಿಸುವುದು, ಹೆಚ್ಚುವರಿ ಪೈಪ್‌ ಅಳವಡಿಸುವುದು, ಅಗತ್ಯವಿರುವ ಕಡೆಗಳಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸುವುದು ಹಾಗೂ ಪಂಪ್ ಮತ್ತು ಮೋಟಾರ್‌ಗಳು ಕೆಟ್ಟು ಹೋದಲ್ಲಿ ತಕ್ಷಣವೇ ದುರಸ್ತಿ ಕೈಗೊಳ್ಳುವಂತೆ ನಿರ್ದೇಶಿಸಲಾಗಿದೆ.

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಎಲ್ಲಾ ಕುಡಿಯುವ ನೀರಿನ ಮೂಲಗಳು, ಕೊಳವೆಬಾವಿಗಳು, ಪಂಪ್‌ಸೆಟ್‌ಗಳು ಹಾಗೂ ಓವರ್‌ಹೆಡ್ ಟ್ಯಾಂಕ್‌ಗಳನ್ನು ನಿಯಮಿತವಾಗಿ ಪರಿಶೀಲಿಸಿ, ಯಾವುದೇ ಸಮಸ್ಯೆ ಉಂಟಾಗದಂತೆ ಕ್ರಮವಹಿಸಲು ತಿಳಿಸಲಾಗಿದೆ. ಅಗತ್ಯವಿರುವ ಕಡೆಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಸೇರಿದಂತೆ ಪರ್ಯಾಯ ವ್ಯವಸ್ಥೆಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಬಿಸಿ ಗಾಳಿ ಹೆಚ್ಚಾಗುತ್ತಿದ್ದು, ಈ ಸಂದರ್ಭಗಳಲ್ಲಿ ಆರೋಗ್ಯದ ಮೇಲೆಯೂ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ, ಜನರು ಮಧ್ಯಾಹ್ನ ವೇಳೆಯಲ್ಲಿ ಅನಗತ್ಯವಾಗಿ ಹೊರಗೆ ಹೋಗುವುದನ್ನು ತಪ್ಪಿಸಬೇಕು, ಸಾಕಷ್ಟು ನೀರು ಸೇವಿಸಬೇಕು ಮತ್ತು ನೆರಳು ಪ್ರದೇಶಗಳಲ್ಲಿ ವಿಶ್ರಾಂತಿ ಪಡೆಯಬೇಕಾಗಿದ್ದು, ಈ ಬಗ್ಗೆ ಗ್ರಾ.ಪಂ.ಗಳಲ್ಲಿ ಅರಿವು ಮೂಡಿಸಬೇಕು ಎಂದು ತಿಳಿಸಿದರು.

ಸಾರ್ವಜನಿಕರ ಅನುಕೂಲಕ್ಕಾಗಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಸಹಾಯವಾಣಿ ತೆರೆಯಲಾಗಿದೆ. ಜಿಲ್ಲೆಯ ಸಾರ್ವಜನಿಕರು ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಜಿಲ್ಲಾ ಮಟ್ಟದ ಸಹಾಯವಾಣಿ ಸಂಖ್ಯೆ 📞 9480872005 ಗೆ ಸಂಪರ್ಕಿಸಬಹುದಾಗಿದೆ. ತಾಲ್ಲೂಕು ಮಟ್ಟದಲ್ಲಿಯೂ ಸಂಬಂಧಿತ ಅಧಿಕಾರಿಗಳ ಮೊಬೈಲ್ ಸಂಖ್ಯೆಗಳ ಮೂಲಕ ದೂರು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ತಾಲ್ಲೂಕು ಮಟ್ಟದ ಸಹಾಯವಾಣಿ ಸಂಖ್ಯೆಗಳು: ಕೆ.ಆರ್.ಪೇಟೆ: 📞 9480872105, 9632769002, ಮದ್ದೂರು: 📞 9480872110, 9611156538, ಮಳವಳ್ಳಿ: 📞 9480872115, 8073869030, ಮಂಡ್ಯ: 📞 9480872100, 9448331517, ನಾಗಮಂಗಲ: 📞 9480872120, 7892595299, ಪಾಂಡವಪುರ: 📞 9480872125, 9886697412, ಶ್ರೀರಂಗಪಟ್ಟಣ: 📞 9480872130, 9900848408
ಇದಲ್ಲದೆ, ಪ್ರತೀ ಸೋಮವಾರ ಜಿಲ್ಲೆಯ ಎಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಭೆ ನಡೆಸಿ ಕುಡಿಯುವ ನೀರು ಸರಬರಾಜಿನ ಸ್ಥಿತಿಗತಿ ಹಾಗೂ ಸಮಸ್ಯೆಗಳ ಕುರಿತು ಸಮಗ್ರವಾಗಿ ಪರಿಶೀಲನೆ ಮತ್ತು ಚರ್ಚೆ ನಡೆಸಲಾಗುತ್ತಿದೆ. ಅದೇ ರೀತಿ ತಾಲ್ಲೂಕು ಹಂತದಲ್ಲಿಯೂ ತಹಶಿಲ್ದಾರ್‌, ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಸಮನ್ವಯ ಸಭೆಗಳನ್ನು ನಡೆಸಿ, ಕುಡಿಯುವ ನೀರು ಸರಬರಾಜು ಸಮಸ್ಯೆಗಳ ಕುರಿತು ಚರ್ಚಿಸಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ನಡವಳಿಯನ್ನು ಜಿಲ್ಲಾ ಪಂಚಾಯತ್‌ಗೆ ನಿಯಮಿತವಾಗಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಸಾರ್ವಜನಿಕರು ಸಹ ಕುಡಿಯುವ ನೀರನ್ನು ಮಿತವಾಗಿ ಬಳಸುವ ಮೂಲಕ ನೀರಿನ ಸಂರಕ್ಷಣೆಗೆ ಸಹಕರಿಸುವಂತೆ ಜಾಗೃತಿ ಮೂಡಿಸಲು ಕ್ರಮವಹಿಸುವಂತೆ ಜಿ.ಪಂ. ಸಿಇಓ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಯೋಜನಾ ನಿರ್ದೇಶಕರಾದ ಸುಂದರ್‌ ರಾಜ್‌, ಜಿಲ್ಲೆಯ ಎಲ್ಲಾ ತಾಲ್ಲೂಕು ಪಂಚಾಯತ್‌ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳ ಸಹಾಯಕ ಕಾರ್ಯಪಾಲಕ ಅಭಿಯಂತರರು ಮತ್ತು ಜಿಲ್ಲೆಯ ಎಲ್ಲಾ ಪಂಚಾಯತ್‌ ಅಭಿವೃದ್ದಿ ಅಧಿಕಾರಿಗಳು ವಿಡಿಯೋ ಸಂವಾದದ ಮೂಲಕ ಹಾಜರಿದ್ದರು.‌

✅ ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಸೆಲೆಬ್ರಿಟಿ ಕ್ರಿಕೆಟ್ ಲೀಗ್ (ಸಿಸಿಎಲ್) ಟಿ20ಟೂರ್ನಿ: 2026ರ ಚಾಂಪಿಯನ್

ಕನ್ನಡ ಭಾಷೆಯಲ್ಲೂ ರೈಲ್ವೆ ಪರೀಕ್ಷೆ ನಡೆಸುವಂತೆ ನಿಖಿಲ್‌ ಕುಮಾರಸ್ವಾಮಿ ಪತ್ರ

ವೆನಿಜುವೆಲಾದಲ್ಲಿ ಅಮೇರಿಕ ನಡೆಸಿದ ವಾಯುದಾಳಿಯಲ್ಲಿ 40 ಜನ ಸಾವು-

Leave a Comment