ಸಕಾಲ ಯೋಜನೆಯಡಿ ಸ್ವೀಕರಿಸಿದ ಎಲ್ಲಾ ಅರ್ಜಿಗಳನ್ನು ನಿಗದಿತ ಅವಧಿಯೊಳಗೆ ಇತ್ಯರ್ಥಗೊಳಿಸಿ : ಮನೋಜ್ ಕುಮಾರ್ ಮೀನಾ
ಪಾಲನೆ ನ್ಯೂಸ್
ಮಂಡ್ಯ : ಬೇಸಿಗೆಯ ಅವಧಿಯಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಸಕಾಲ ಯೋಜನೆಯಡಿ ಸ್ವೀಕರಿಸಿದ ಎಲ್ಲಾ ಅರ್ಜಿಗಳನ್ನು ನಿಗದಿತ ಅವಧಿಯೊಳಗೆ ಇತ್ಯರ್ಥಗೊಳಿಸಬೇಕು ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗಳಾದ ಮನೋಜ್ ಕುಮಾರ್ ಮೀನಾ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಸಕಾಲ ಯೋಜನೆಯಡಿ ಸ್ವೀಕರಿಸಿದ ಎಲ್ಲಾ ಅರ್ಜಿಗಳನ್ನು ನಿಗದಿತ ಅವಧಿಯೊಳಗೆ ಇತ್ಯರ್ಥಗೊಳಿಸಿ ಸಾರ್ವಜನಿಕರಿಗೆ ಸಮರ್ಪಕವಾಗಿ ಸಕಾಲ ಯೋಜನೆಯ ಸೇವೆಗಳು ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದು ಅವರು ತಿಳಿಸಿದರು.

ಬೇಸಿಗೆಯ ಸಂದರ್ಭದಲ್ಲಿ ಕುಡಿಯುವ ನೀರಿನ ಪೂರೈಕೆ, ಜಲಜೀವನ್ ಮಿಷನ್ (JJM) ಯೋಜನೆಗಳ ಪ್ರಗತಿ ಮತ್ತು ಜಾನುವಾರುಗಳಿಗೆ ಮೇವಿನ ಲಭ್ಯತೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚೆ ನೆಡೆಸಿದರು.
ಜನತೆಯ ಸಮಸ್ಯೆಗಳಿಗೆ ಸ್ಪಂದಿಸಬೇಕು. ಸಾರ್ವಜನಿಕರ ಆರೋಗ್ಯ ಹಿತದೃಷ್ಠಿಯಿಂದ ಮುಂಜಾಗ್ರತೆ ಕ್ರಮವಾಗಿ ಪರೀಕ್ಷೆಗೊಳಪಡಿಸಿಯೇ ಕುಡಿಯುವ ನೀರು ಪೂರೈಸಲು ಕ್ರಮ ವಹಿಸಬೇಕು ಎಂದರು. ತೀವ್ರ ಸಮಸ್ಯೆ ಇರುವ ಗ್ರಾಮಗಳಿಗೆ ಆದ್ಯತೆ ಮೇರೆಗೆ ಟ್ಯಾಂಕರ್ ಮೂಲಕ ನೀರು ಒದಗಿಸಲು ಸೂಚಿಸಿದರು. ಸಾಲಬಾಧೆ ಅಥವಾ ಕೃಷಿ ಸಂಕಷ್ಟದಿಂದ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಪರಿಹಾರ ನೀಡಬೇಕು. ಸಾಮಾಜಿಕ ಭದ್ರತಾ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ವಿವಿಧ ಮಾಸಾಶನವನ್ನು ನೀಡುವಂತೆ ಸಭೆಯಲ್ಲಿ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಡಾ ಕುಮಾರ ಅವರು ಮಾತನಾಡಿ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿ ಒಟ್ಟು 289 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದೆಂದು ಅಂದಾಜಿಸಲಾಗಿದ್ದು, ಈಗಾಗಲೇ 15 ಗ್ರಾಮಗಳಲ್ಲಿ ಖಾಸಗಿ ಕೊಳವೆಬಾವಿಗಳ ಮೂಲಕ ಕುಡಿಯುವ ನೀರು ಸರಬರಾಜು ಮಾಡುವ ವ್ಯವಸ್ಥೆ ಕಲ್ಪಿಸಲಾಗಿದೆ. ಉಳಿದ ಗ್ರಾಮಗಳಲ್ಲಿಯೂ ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಕೊಳವೆಬಾವಿಗಳಲ್ಲಿ ಇಳುವರಿ ಕಡಿಮೆಯಾದ ತಕ್ಷಣವೇ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳಿಗೆ ವಿಶೇಷ ಸೂಚನೆ ನೀಡಲಾಗಿದೆ ಹಾಗೂ ಅದರಂತೆ ಕೊಳವೆಬಾವಿಗಳನ್ನು ಮರು ಆಳಗೊಳಿಸುವುದು, ಹೆಚ್ಚುವರಿ ಪೈಪ್ ಅಳವಡಿಸುವುದು, ಅಗತ್ಯವಿರುವ ಕಡೆಗಳಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸುವ ಬಗ್ಗೆ ಅಗತ್ಯ ಕ್ರಮವಹಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದರು.

ಜನಗಣತಿ ಕಾರ್ಯ ಜಿಲ್ಲೆಯಲ್ಲಿ ಉತ್ತಮ ಪ್ರಗತಿಯಲ್ಲಿ ಇದೆ ಎಂದು ಅವರು ತಿಳಿಸಿದರು. ಅಪರ ಜಿಲ್ಲಾಧಿಕಾರಿ ಶಿವನಂದಾಮೂರ್ತಿ, ಉಪ ವಿಭಾಗಾಧಿಕಾರಿಗಳಾದ ಶ್ರೀನಿವಾಸ್, ಶಿವಾಮೂರ್ತಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn
