ಪಾಲನೆ ನ್ಯೂಸ್
ಮಂಡ್ಯ: ಮಾನ್ಯ ಮುಖ್ಯಮಂತ್ರಿಗಳು ದಿನಾಂಕ ಫೆಬ್ರವರಿ 6ರಂದು ಮಂಡ್ಯ ತಾಲ್ಲೂಕಿನ ಬೇವುಕಲ್ಲು ಗ್ರಾಮದಲ್ಲಿರುವ ಬೀರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ಮಂಡ್ಯ ಜಿಲ್ಲಾಧಿಕಾರಿಗಳು ಇಂದು ಸ್ಥಳಕ್ಕೆ ಭೇಟಿ ನೀಡಿ ಪೂರ್ವಸಿದ್ಧತೆಗಳ ಪರಿಶೀಲನೆ ನಡೆಸಿದರು.

ಮಾನ್ಯ ಮುಖ್ಯಮಂತ್ರಿಗಳ ಭೇಟಿ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಿಕೆ, ಸುಗಮ ಸಂಚಾರ ವ್ಯವಸ್ಥೆ, ಸಾರ್ವಜನಿಕರ ಸುರಕ್ಷತೆ, ಸ್ವಚ್ಛತೆ ಹಾಗೂ ಮೂಲಸೌಕರ್ಯಗಳ ಸಮರ್ಪಕ ನಿರ್ವಹಣೆ ಕುರಿತು ಜಿಲ್ಲಾಧಿಕಾರಿಗಳು ವಿಶೇಷ ಗಮನ ಹರಿಸುವಂತೆ ಸೂಚಿಸಿದರು.
ದೇವಸ್ಥಾನ ಆವರಣ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಯಾವುದೇ ಅಡಚಣೆ ಉಂಟಾಗದಂತೆ ಭದ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು, ವಾಹನಗಳ ನಿಲುಗಡೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಹಾಗೂ ತುರ್ತು ಪರಿಸ್ಥಿತಿಗಳಿಗೆ ಅಗತ್ಯವಿರುವ ವೈದ್ಯಕೀಯ ಮತ್ತು ಅಗ್ನಿಶಾಮಕ ಸೌಲಭ್ಯಗಳನ್ನು ಸಿದ್ಧವಾಗಿಟ್ಟುಕೊಳ್ಳಲು ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಮಾನ್ಯ ಮುಖ್ಯಮಂತ್ರಿಗಳ ಕಾರ್ಯಕ್ರಮವು ಸುಗಮವಾಗಿ ಹಾಗೂ ಯಶಸ್ವಿಯಾಗಿ ನೆರವೇರಲು ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸು ವಂತೆ ಹಾಗೂ ನಿಗದಿತ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಈ ಪರಿಶೀಲನೆ ಸಂದರ್ಭದಲ್ಲಿ ಪೊಲೀಸ್ ಅಧೀಕ್ಷಕರು, ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಮಂಡ್ಯ ತಹಶೀಲ್ದಾರ್, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಗೂ ಇತರೆ ಸಂಬಂಧಪಟ್ಟ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.
ಪಾಲನೆ.ಇನ್ ವಾಟ್ಸ್ ಆಪ್ ಗುಂಪಿಗೆ ಸೇರಿರಿ.


