ಅಸ್ಥಿ ವಿಸರ್ಜನೆ ಜೊತೆಗೆ ಬಟ್ಟೆ ಮತ್ತು ಪೂಜಾ ಸಾಮಗ್ರಿ ನದಿಗೆ ಬಿಡುವುದು ಸಂಪೂರ್ಣ ನಿಷೇಧ
ಪಾಲನೆ ನ್ಯೂಸ್
ಮಂಡ್ಯ : ಅವೈಜ್ಞಾನಿಕವಾಗಿ ಅಸ್ಥಿ ವಿಸರ್ಜನೆ ಮಾಡುವುದರಿಂದ ನದಿಗಳು ಕಲುಷಿತಗೊಳ್ಳುತ್ತಿವೆ. ಈ ಹಿನ್ನೆಲೆಯಲ್ಲಿ ಕಾವೇರಿ ಪಾತ್ರದಲ್ಲಿ ವೈಜ್ಞಾನಿಕ ರೀತಿಯಲ್ಲಿ ಧಾರ್ಮಿಕ ವಿಧಿವಿಧಾನಗಳ ಆಚರಣೆ ಹಾಗೂ ಅಸ್ಥಿ ವಿಸರ್ಜನೆ ಮಾಡುವಾಗ ನೈರ್ಮಲ್ಯ ಕಾಪಾಡುವ ಕ್ರಮಗಳನ್ನು ಕೈ ಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಅವರು ತಿಳಿಸಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಗರಾಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಅಸ್ಥಿ ವಿಸರ್ಜನೆಯ ಜೊತೆಗೆ ಬಟ್ಟೆ ಮತ್ತು ಪೂಜಾ ಸಾಮಗ್ರಿಗಳನ್ನು ನದಿಗೆ ಎಸೆಯುವುದರಿಂದ ಮಾಲಿನ್ಯ ಹೆಚ್ಚಾಗುತ್ತಿದ್ದು, ಇದನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳು ಶ್ರೀರಂಗಪಟ್ಟಣ ಮುಖ್ಯಾಧಿಕಾರಿಗೆ ಸೂಚಿಸಿದರು.

ಕಾವೇರಿ ನದಿಯಲ್ಲಿ ಅಸ್ಥಿ ವಿಸರ್ಜನೆ ಮಾಡಲು ಪಶ್ಚಿಮವಾಹಿನಿ, ಸ್ನಾನಘಟ್ಟ, ಗೋಸಾಯಿ ಘಾಟ್ ಮತ್ತು ಸಂಗಮ ಸ್ಧಳಗಳಲ್ಲಿ ಅಸ್ಥಿ ವಿಸರ್ಜನೆ ಪ್ರಕ್ರಿಯೆಯನ್ನು ವ್ಯವಸ್ಥಿತವಾಗಿ ನಡೆಸಲು ಪುರೋಹಿತರಿಗೆ ನಿರ್ದಿಷ್ಟ ದರ ನಿಗದಿಪಡಿಸಬೇಕು ಹಾಗೂ ಆ ಸ್ಧಳಗಳಲ್ಲಿ ಸಿಸಿ ಟಿವಿ ಅಳವಡಿಸಬೇಕು ಎಂದು ಅವರು ತಿಳಿಸಿದರು.

ನದಿಯ ಪಾವಿತ್ರ್ಯತೆ ಮತ್ತು ಪರಿಸರ ರಕ್ಷಣೆಗಾಗಿ ಪರಿಸರ ಮಾಲಿನ್ಯ ನಿಯಂತ್ರಣಾಧಿಕಾರಿ ಅವರು ಸ್ಥಳಕ್ಕೆ ಭೇಟಿ ನೀಡಿ ನದಿ ಪಾತ್ರವು ಮಲಿನ ಆಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ತಿಳಿಸಿದರು.
ಶ್ರೀರಂಗಪಟ್ಟಣ ತಾಲ್ಲೂಕಿನ ಮುಖ್ಯಾಧಿಕಾರಿ ಅಲ್ಲಿನ ಪುರೋಹಿತರನ್ನು ಕರೆದು ಸಭೆ ನಡೆಸಿ ವೈಜ್ಞಾನಿಕ ರೀತಿಯಲ್ಲಿ ಧಾರ್ಮಿಕ ವಿಧಿವಿಧಾನ ಕೈಗೊಳ್ಳುವಂತೆ ತಿಳಿಸಲು ಜಿಲ್ಲಾಧಿಕಾರಿ ತಿಳಿಸಿದರು.
ನದಿಯ ಪಾವಿತ್ರ್ಯತೆ ಮತ್ತು ಪರಿಸರ ರಕ್ಷಣೆಗಾಗಿ ಪ್ರತ್ಯೇಕವಾದ ಮಾರ್ಗಸೂಚಿ ಸಿದ್ಥಪಡಿಸಿ ಹಾಗೂ ನದಿ ಪಾತ್ರವು ಮಲಿನವಾಗದಂತೆ ಅಗತ್ಯಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಥಿ ಕೋಶದ ಯೋಜನಾಧಿಕಾರಿ ನರಸಿಂಹಮೂರ್ತಿ, ಕಾರ್ಯಪಾಲಕ ಅಭಿಯಂತರರಾದ ಪ್ರತಾಪ್ ಹಾಗೂ ಮುಖ್ಯಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

