ಪಾಲನೆ ನ್ಯೂಸ್
ಮಂಡ್ಯ: ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಒಂದು ತಿಂಗಳ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಅಭಿಯಾನದ ಅವಧಿಯಲ್ಲಿ ಅಕ್ಕ ಕೆಫೆ ಗಳನ್ನು ಪೂರ್ಣಗೊಳಿಸಿ GPLF ಗಳಿಗೆ ಹಸ್ತಾಂತರ ಮಾಡುವ ಮೂಲಕ ಮಹಿಳೆಯರ ಆರ್ಥಿಕ ಬಲವರ್ಧನೆಗೆ ಕ್ರಮವಹಿಸಬೇಕೆಂದು ಅಧಿಕಾರಿಗಳಿಗೆ ಜಿ. ಪಂ. ಸಿಇಓ ನಂದಿನಿ ಕೆ. ಆರ್. ಅವರು ಸೂಚಿಸಿದರು.
ಗುರುವಾರ ಮಂಡ್ಯ ಜಿಲ್ಲಾ ಪಂಚಾಯತ್ ನ ಮಿನಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮಳವಳ್ಳಿ, ಶ್ರೀರಂಗಪಟ್ಟಣ ಮತ್ತು ಪಾಂಡವಪುರ ತಾಲ್ಲೂಕು ಕೇಂದ್ರಗಳಲ್ಲಿ ಅಕ್ಕ ಕೆಫೆ ನಿರ್ಮಾಣ ಮಾಡಲು ಅನುಮೋದನೆ ನೀಡಲಾಗಿದ್ದು, ಮಾರ್ಚ್ 14ರೊಳಗೆ ಕಾಮಗಾರಿಗಳನ್ನು ಮುಕ್ತಾಯಗೊಳಿಸುವಂತೆ ಸೂಚಿಸಿದರು. ಮಂಡ್ಯ ಜಿಲ್ಲೆಗೆ ಈ ಹಿಂದೆ 3 ಅಕ್ಕ ಕೆಫೆಗಳು ಮಂಜೂರಾಗಿದ್ದು, ಅವುಗಳ ಕಾಮಗಾರಿಗಳನ್ನು ಇನ್ನೂ ಸಹ ಪೂರ್ಣಗೊಳಿಸಿಲ್ಲವೆಂದು ಆಕ್ಷೇಪ ವ್ಯಕ್ತಪಡಿಸಿ ಕೂಡಲೇ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸೂಚಿಸಿದರು.
ಮತ್ತೆ 3 ಅಕ್ಕ ಕೆಫೆ ಮಂಜೂರು: ಮಂಡ್ಯ ಜಿಲ್ಲೆಯ ಮಂಡ್ಯ, ಮದ್ದೂರು ಮತ್ತು ನಾಗಮಂಗಲ ತಾಲ್ಲೂಕು ಕೇಂದ್ರಗಳಲ್ಲಿ ಅಕ್ಕ ಕೆಫೆಗಳನ್ನು ನಿರ್ಮಾಣ ಮಾಡಲು ಸರ್ಕಾರವು ಮಂಜೂರಾತಿ ನೀಡಿದ್ದು, ಸದರಿ ಕಾಮಗಾರಿಗಳನ್ನು ಸಹ ಕೂಡಲೇ ಕೈಗೆತ್ತಿಕೊಂಡು ಪೂರ್ಣಗೊಳಿಸಲು ಸೂಚಿಸಿದರು.

ಅಕ್ಕ ಕೆಫೆಗಳ ಕಾಮಗಾರಿಗಳು ಪೂರ್ಣಗೊಂಡ ನಂತರ ಆಯಾ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು ತಮ್ಮ ತಾಲ್ಲೂಕಿನ ಆಸಕ್ತಿ ಹೊಂದಿರುವ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳನ್ನು ನಿಯಮಾನುಸಾರ ಆಯ್ಕೆ ಮಾಡಿ ನಿಯೋಜಿಸಬೇಕು. ಸದರಿ ಒಕ್ಕೂಟಗಳು ನೀಡುವ ಆಹಾರದಲ್ಲಿ ರುಚಿ, ಗುಣಮಟ್ಟ, ಶುಚಿತ್ವ, ಸ್ವಚ್ಛತೆ (ಹೈಜಿನ್) ಕಾಪಾಡಿಕೊಳ್ಳುವುದರ ಜೊತೆಗೆ ಅಕ್ಕ ಕೆಫೆಗಳ ಸುಸೂತ್ರ ನಿರ್ವಹಣೆಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸಿಇಓರವರು ತಿಳಿಸಿದರು.

ತಾಲ್ಲೂಕು ಕಮಿಟಿ ರಚನೆ : ಅಕ್ಕ ಕೆಫೆಗಳ ಮೇಲ್ವಿಚಾರಣೆಗಾಗಿ ಸಂಬಂಧಿತ ಇಲಾಖೆಗಳ ಪ್ರತಿನಿಧಿಗಳನ್ನು ಒಳಗೊಂಡ ತಾಲ್ಲೂಕು ಮಟ್ಟದ ಸಮಿತಿಯನ್ನು ರಚಿಸಿ ನಿಯಮಿತವಾಗಿ ಪರಿಶೀಲನೆ ನಡೆಸುವಂತೆ ಸೂಚಿಸಲಾಯಿತು. ಮಹಿಳಾ ಸ್ವಸಹಾಯ ಸಂಘಗಳ ಮೂಲಕ ಅಕ್ಕ ಕೆಫೆಗಳನ್ನು ಯಶಸ್ವಿಯಾಗಿ ನಿರ್ವಹಿಸುವ ಮೂಲಕ ಮಹಿಳೆಯರಿಗೆ ಉದ್ಯೋಗಾವಕಾಶ ಕಲ್ಪಿಸಿ, ಸ್ವ-ಸಹಾಯ ಸಂಘಗಳ ಆರ್ಥಿಕ ಬಲವರ್ಧನೆಗೆ ಕ್ರಮವಹಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ನ ಯೋಜನಾ ನಿರ್ದೇಶಕರಾದ ಸುಂದರ್ ರಾಜ್, ಸಹಾಯಕ ಯೋಜನಾಧಿಕಾರಿ ಶ್ರೀಹರ್ಷ, ಜಿಲ್ಲೆಯ ಎಲ್ಲಾ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಯೋಜನೆಯ ಸಿಬ್ಬಂದಿ ಗಳು ಭಾಗವಹಿಸಿದ್ದರು.
✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn
